Flash

Flash: ಸಿದ್ಧವಾಗುತ್ತಿದೆ ತರಕಾರಿ ತೋಟ...

08 February 2010

ಶಾಲಾ ವಾರ್ಷಿಕೋತ್ಸವ

“ವಿದ್ಯಾರ್ಥಿಗಳ ಬಹುಮುಖಿ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ಶಾಲಾ ವಾರ್ಷಿಕೋತ್ಸವಗಳು ಉತ್ತಮ ವೇದಿಕೆಯಾಗಿವೆ. ಅವರ ಬೆಳವಣಿಗೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಶಾಲಾ ಕಾರ್ಯಕ್ರಮಗಳು ನಡೆಯುತ್ತವೆ. ಹೆಸರಾಂತ ಮಹಾಜನ ವಿದ್ಯಾಸಂಸ್ಥೆ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ನಾಡಿನ ಹಿರಿಯ ಸಂಸ್ಥೆಯ ಶತಮಾನೋತ್ಸವವನ್ನು ನಾವೆಲ್ಲ ಸಂಭ್ರಮದಿಂದ ಆಚರಿಸಬೇಕಾಗಿದೆ.”ಎಂದು ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಶಂಕರ ಮೋಹನದಾಸ ಆಳ್ವ ಅಭಿಪ್ರಾಯಪಟ್ಟರು. ಅವರು ನೀರ್ಚಾಲಿನಲ್ಲಿ ೦೬.೦೨.೨೦೧೦ ಶನಿವಾರದಂದು ಜರಗಿದ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ವರ್ಧಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೇರಳ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ರಮೇಶ ಮತ್ತು ತೊಂಭತ್ತು ವರ್ಷಗಳನ್ನು ಪೂರೈಸಿದ ಮಹಾಜನ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕರಾದ ಖಂಡಿಗೆ ಶ್ಯಾಮ ಭಟ್ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಎಂ.ಅಬ್ಬಾಸ್ ಶುಭಾಶಂಸನೆಗೈದರು.

ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ವರದಿ ವಾಚಿಸಿದರು. ಶಾಲಾ ಹಿರಿಯ ಅಧ್ಯಾಪಕ ಎಸ್. ವಿ. ಭಟ್ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಶಾರೀರಿಕ ಶಿಕ್ಷಣ ಅಧ್ಯಾಪಕ ಎಂ.ಸೂರ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು. ಮಹಾಜನ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆಯನ್ನೂ ಏರ್ಪಡಿಸಲಾಗಿತ್ತು.

1 comment: