Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

30 March 2012

ನಾಳೆಯಿಂದ ರಜೆ...

ಬೇಸಗೆ ಪರೀಕ್ಷೆಗಳು ಇಂದು ಕೊನೆಗೊಳ್ಳುತ್ತವೆ. ಇನ್ನು ಅಧ್ಯಾಪಕ ಮಿತ್ರರಿಗೆ ‘ಉತ್ತರಕಾಂಡ’ ಆರಂಭವಾಗುತ್ತದೆ. ನಡುವೆಯೇ ಅಧ್ಯಾಪಕರಿಂದ ‘ಸೋಶಿಯೋ ಇಕೊನೊಮಿಕ್ ಸರ್ವೇ’ ಮತ್ತು ಜಾತಿವಾರು ಜನಗಣತಿ ಆರಂಭವಾಗಲಿದೆ. ಕಾಸರಗೋಡಿನ ಕನ್ನಡ ನೆಲದಲ್ಲಿ ಕನ್ನಡದ ಹೊಸ ಪೀಳಿಗೆಯನ್ನು ಹುಡುಕುತ್ತಾ ಮನೆ - ಮನೆ ಭೇಟಿ ಇದ್ದೇ ಇದೆ. ವಿದ್ಯಾರ್ಥಿಗಳಿಗೆ ಹೊಸ ಅನುವಗಳನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಅವಿರತವಾಗಿ ಮುಂದುವರಿಯುತ್ತಿದೆ. ಈ ಸಂದರ್ಭದಲ್ಲಿ ಅಂತಹ ಒಂದು ಪ್ರಯತ್ನವಾಗಿ ನಮ್ಮ ಶಾಲಾ ವಿದ್ಯಾರ್ಥಿಗಳು ದರ್ಜಿಯನ್ನು ಸಂದರ್ಶಿಸಿ ಮಾಹಿತಿಗಳನ್ನು ಪಡೆದುಕೊಂಡ ಸಂದರ್ಭದ ಫೋಟೋ ಒಂದನ್ನು ನಮ್ಮ ಕಡತದಿಂದ ಆರಿಸಿ ನಿಮ್ಮ ಮುಂದೆ ಇರಿಸುತ್ತಿದ್ದೇವೆ.
ವಸಂತ ಕಾಲ ನಮ್ಮ ಮುಂದೆ ಇದೆ...
ಎಲ್ಲ ಚಿಂತೆ - ಚಿಂತನೆಗಳ ನಡುವೆ ನಮ್ಮ ಶುಭಾಶಯಗಳನ್ನೂ ಸ್ವೀಕರಿಸಿ...

23 March 2012

ಚಾಂದ್ರಮಾನ ಯುಗಾದಿಯ ಶುಭಾಶಯಗಳು...


ನಮ್ಮ ಶಾಲೆಯ ಪಡು ಸಭಾಂಗಣದಲ್ಲಿ ಇಂದು ಒಂದು ಆತ್ಮೀಯ ಕಾರ್ಯಕ್ರಮ. ಶಾಲೆಯ ಪೂರ್ವ ವಿದ್ಯಾರ್ಥಿ, ಸಂಸ್ಕೃತ ವಿದ್ವಾಂಸ ವೇದಮೂರ್ತಿ ಬಳ್ಳಪದವು ಶಂಕರನಾರಾಯಣ ಭಟ್ಟರ ಪ್ರಾಯೋಜಕತ್ವದಲ್ಲಿ ನಂದನ ಸಂವತ್ಸರದ ಆರಂಭದ ಈ ಸುದಿನದಂದು ಗಣಪತಿ ಪೂಜೆ ನಡೆಯಿತು. ಕರ್ನಾಟಕ ಬ್ಯಾಂಕಿನ ನೀರ್ಚಾಲು ಶಾಖಾ ಪ್ರಬಂಧಕ ಶಿವಕುಮಾರ್ ದೀಪ ಬೆಳಗಿಸಿ ‘ಮಹಾಜನ’ ಸಂಸ್ಥೆಯ ಶತಮಾನೋತ್ಸವ ವರ್ಷಕ್ಕೆ ಚಾಲನೆ ನೀಡಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು.

05 March 2012

ರಾಷ್ಟ್ರಪತಿ ಸ್ಕೌಟ್ ಪ್ರಶಸ್ತಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ೨೦೧೧-೧೨ನೇ ಸಾಲಿನಲ್ಲಿ ನೀಡುವ ‘ರಾಷ್ಟ್ರಪತಿ ಸ್ಕೌಟ್’ ಪ್ರಶಸ್ತಿಗೆ ನಮ್ಮ ಶಾಲೆಯ ಮೂರು ಮಂದಿ ಸ್ಕೌಟ್ ವಿದ್ಯಾರ್ಥಿಗಳು ಪಾತ್ರರಾಗಿದ್ದಾರೆ ಎಂದು ತಿಳಿಸಲು ಸಂತಸವಾಗುತ್ತಿದೆ. ಹತ್ತನೇ ತರಗತಿಯ ಗುರುವಿನಯಕೃಷ್ಣ. ಕೆ.ಆರ್ ( ಕಡವ ರಾಮಚಂದ್ರ ಭಟ್ ಮತ್ತು ನಮ್ಮ ಶಾಲಾ ಹಿಂದಿ ಶಿಕ್ಷಕಿ ಸಿ.ಎಚ್.ಸರಸ್ವತಿ ಇವರ ಪುತ್ರ), ನಂದನ.ಎ ( ಆರೋಳಿ ಕೃಷ್ಣ ಭಟ್ ಮತ್ತು ಮೂಕಾಂಬಿಕಾ ಇವರ ಪುತ್ರ) ಹಾಗೂ ಪೂರ್ವ ವಿದ್ಯಾರ್ಥಿ ವಿನೀತ್ ಶಂಕರ್.ಎಚ್ ( ನಮ್ಮ ಶಾಲಾ ಶಿಕ್ಷಕ ಎಚ್.ಸೂರ್ಯನಾರಾಯಣ ಮತ್ತು ಶ್ಯಾಮಲಾ ಇವರ ಪುತ್ರ). ಇವರಿಗೆ ನಮ್ಮೆಲ್ಲರ ಶುಭ ಹಾರೈಕೆಗಳು...